Realtime blog statisticsweb statistics
udupibits.in
Breaking News
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ- ಶಂಕಿತ ಹಂತಕ ಬಿಜಾಪುರ ಸಿಂಧಗಿಯ ಪರಶುರಾಮ ವಾಗ್ಮೊರೆ ಬಂಧನ.

ಅ.11ರಿಂದ ಗ್ರಾಮ ಲೆಕ್ಕಾಧಿಕಾರಿಗಳಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ

ಉಡುಪಿ: ಪ್ರಮುಖ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ಅಕ್ಟೋಬರ್  11ರಿಂದ ಅನಿರ್ಧಿಷ್ಠಾವಧಿ ಮುಷ್ಕರ ಹಮ್ಮಿಕೊಳ್ಳಲು ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘ ನಿರ್ಧರಿಸಿದೆ.

ಗ್ರಾಮ ಲೆಕ್ಕಾಧಿಕಾರಿಗಳು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಈಗಾಗಲೇ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಲಾಗಿದ್ದರೂ ಸರ್ಕಾರ ಸೂಕ್ತ ಸ್ಪಂದನೆ ನೀಡದ ಕಾರಣ ಅ. 11ರಿಂದ ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅನಿರ್ಧಿಷ್ಠಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಸಂಘದ ಅಧ್ಯಕ್ಷ ಅಂದಾನಗೌಡ ದಾನಪ್ಪಗೌಡರು ಸುದ್ಧಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಇಲಾಖೆ ಅಧಿಕಾರಿಗಳು ಇಲಾಖೆ ತಾಂತ್ರಿಕ ಕೆಲಸ ಕಾರ್ಯಗಳನ್ನು ವಿವಿಧ ತಂತ್ರಾಂಶ ಅಭಿವೃದ್ಧಿಪಡಿಸಿ ತಾಂತ್ರಿಕೇತರ ಕಾರ್ಯನಿರ್ವಾಹಕ ಸಿಬ್ಬಂದಿಗಳಾದ ಗ್ರಾಮ ಲೆಕ್ಕಾಧಿಕಾರಿಗಳ ಮೇಲೆ ಜಿಲ್ಲಾಧಿಕಾರಿಗಳ ಮೂಲಕ ವಿಡಿಯೋ ಕಾನ್ಪರೆನ್ಸ್ ಗಳನ್ನು ನಡೆಸಿ ತಾಂತ್ರಿಕ ಕೆಲಸ ನಿರ್ವಹಿಸುವಂತೆ ಗ್ರಾಮ ಲೆಕ್ಕಾಧಿಕಾರಿಗಳಿಗೆ ಮಾನಸಿಕ ಒತ್ತ‌ಡ ನೀಡಲಾಗುತ್ತಿದೆ. ಇದರಿಂದ ಗ್ರಾಮ ಲೆಕ್ಕಾಧಿಕಾರಿಗಳಲ್ಲಿ ಕೌಟುಂಬಿಕ ಸಮಸ್ಯೆ ಆರಂಭವಾಗಿದೆ. ಈ ಎಲ್ಲಾ ವಿಷಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ಪರಿಹಾರ ನೀಡಬೇಕು ಎಂದರು.

ಬೇಡಿಕೆಗಳು

ನಿರ್ಧಿಷ್ಟ ಕೆಲಸ ನಿರ್ವಹಣಾ ಪಟ್ಟಿಯನ್ನು ಜಾರಿಗೊಳಿಸಬೇಕು, ಪದೋನ್ನತಿಯಲ್ಲಿ ಗ್ರಾಮಲೆಕ್ಕಾಧಿಕಾರಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು, ಅನ್ಯ ಇಲಾಖೆಯ ಕೆಲಸಗಳನ್ನು ನೀಡಬಾರದು, ತಾಂತ್ರಿಕ ಕೆಲಸ ಕಾರ್ಯಗಳು ಮತ್ತು ತಂತ್ರಾಂಶ ನಿರ್ವಹಣೆ ಹೊರೆಯನ್ನು ಕೈಬಿಡಬೇಕು, ಸಕಾಲ ರಾಂಕಿಂಗ್ ರದ್ದುಪಡಿಸಬೇಕು, ರಜೆ ದಿನಗಳಲ್ಲಿ ಕೆಲಸ ನಿರ್ವಹಿಸುವಂತೆ ಸೂಚಿಸಬಾರದು, ಗ್ರಾಮ ಲೆಕ್ಕಾಧಿಕಾರಿಗಳ ಮೇಲೆ ನಡೆಯುತ್ತಿರುವ ಹಲ್ಲೆ ಹಾಗೂ ದೌರ್ಜನ್ಯ ಮಾಡುವ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಬೇಕು, ತಹಶೀಲ್ದಾರ್, ಸಹಾಯಕ ಆಯುಕ್ತರು, ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳನ್ನು ಅವರು ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮಕ್ಕೆ ಕಳುಹಿಸಿಕೊಡಬೇಕು, ಮೊಬೈಲ್ ಆಪ್ ಮೂಲಕ ಬೆಳೆ ನಮೂದು ತಂತ್ರಾಂಶವನ್ನು ಈಗಾಗಲೇ ಸ್ಥಗಿತಗೊಳಿಸಿ ಅದನ್ನು ಕಾಯಂ ಆಗಿ ವಿಮುಕ್ತಿಗೊಳಿಸಬೇಕು, ಕಚೇರಿ ಮತ್ತು ವಸತಿ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮ ಸಹಾಯಕರ ಹುದ್ದೆಯನ್ನು ಕಾಯಂಗೊಳಿಸಲು ಒತ್ತಾಯಿಸಲಾಗುವುದು ಎಂದರು.

ವೇದಿಕೆಯಲ್ಲಿ ಗೌರವಾಧ್ಯಕ್ಷ ಸುದೀಪ್. ಡಿ., ಉಪಾಧ್ಯಕ್ಷ ಚಂದ್ರಶೇಖರ ಉಟಕೂರು, ಪ್ರಧಾನ ಕಾರ್ಯದರ್ಶಿ ಜನಾರ್ಧನ ಜೆ. ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *